ವಿಜಯಪುರ: ಚಾಕಲೇಟ್ ತೆಗೆದುಕೊಂಡನೆಂಬ ಕ್ಷುಲ್ಲಕ ಕಾರಣಕ್ಕೆ 8 ವರ್ಷದ ಬಾಲಕನ ಮೇಲೆ ವ್ಯಕ್ತಿಯೊಬ್ಬರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಲಘಾಣ ಗ್ರಾಮದ ನಿವಾಸಿ ಅಶೋಕ ಪತ್ತಾರ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನು ತಿನ್ನುವ ಆಸೆಯಿಂದ ಸ್ಥಳೀಯ ಅಂಗಡಿಯೊಂದರಿಂದ ಚಾಕಲೇಟ್ ತೆಗೆದುಕೊಂಡಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಅಶೋಕ ಪತ್ತಾರ, ಸಣ್ಣ ಮಗುವೆಂದೂ ನೋಡದೆ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಆಲಮೇಲ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಆರೋಪಿ ಅಶೋಕ ಪತ್ತಾರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ನಡೆದಿರುವ ಈ ರೀತಿಯ ಹಲ್ಲೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
